ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಹಜ್ ಭವನಕ್ಕೆ ಸಿದ್ದರಾಮಯ್ಯ ಸರ್ಕಾರ 5 ಸಾವಿರ ಕೋಟಿ ಅನುದಾನ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ವಿಷಯವನ್ನು ಬಿಜೆಪಿ ಕೂಡಾ ಶೇರ್ ಮಾಡಿತ್ತು. ಇದು ಹೊಸ ವಿವಾದ ಹುಟ್ಟುಹಾಕಿತ್ತು. ಈ ಕುರಿತು ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ಕೊಟ್ಟಿದ್ದಾರೆ. ಹಜ್ ಭವನಕ್ಕೆ ಸಿದ್ದರಾಮಯ್ಯ ಸರ್ಕಾರ 5 ಸಾವಿರ ಕೋಟಿ ಕೊಟ್ಟಿದ್ದಾರೆ ಎನ್ನುವುದು ಸುಳ್ಳು ಎಂದಿದ್ದಾರೆ.
ಹಜ್ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 5000 ಕೋಟಿ ರು. ಕೊಟ್ಟಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಸುಳ್ಳು ಹರಡಿ ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ರೀತಿ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಶುಕ್ರವಾರ ಪೊಲೀಸರಿಗೆ ದೂರು ನೀಡಲಾಗುವುದು. ಇನ್ನು ಮುಂದೆ ಯಾರೇ ಇಂತಹ ಅಪಪ್ರಚಾರಕ್ಕೆ ಮುಂದಾದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಜಮೀರ್ ಅಹಮದ್ ಖಾನ್ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಹಜ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನಾನು ಹಜ್ ಭವನ ನಿರ್ಮಾಣಕ್ಕೆ 5000 ಕೋಟಿ ರು. ನೀಡುವಂತೆ ಬೇಡಿಕೆ ಇಟ್ಟಿದ್ದೇನೆ ಎಂದು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಅದು ಶುದ್ಧ ಸುಳ್ಳು ಸುದ್ದಿ. ಹಜ್ ಭವನದ ನವೀಕರಣಕ್ಕೆ ಐದು ಕೋಟಿ ರು. ಕೊಟ್ಟಿದ್ದಾರೆ. ಅದಕ್ಕೆ ಕೃತಜ್ಞತೆ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ ಜಮೀರ್ ಅಹ್ಮದ್.



